Mysore
25
clear sky

Social Media

ಬುಧವಾರ, 21 ಜನವರಿ 2026
Light
Dark

ಬೆಳೆಹಾನಿ ಜಂಟಿಸಮೀಕ್ಷೆಗೆ ಸೂಚನೆ, ವರದಿ ನಂತರ ಪರಿಹಾರ ವಿತರಣೆ ಎಂದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆ ವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಇದನ್ನು ಓದಿ: ಕೂಡಲೇ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿ: ಪ್ರಹ್ಲಾದ್‌ ಜೋಶಿ ಆಗ್ರಹ

ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ತಡವಾಗಿ ವರದಿ ನೀಡಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಪರಿಸ್ಥಿತಿಯ ವರದಿಯನ್ನು ಕೇಂದ್ರಕ್ಕೆ ಸಕಾಲದಲ್ಲಿಯೇ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರವೇ ಈ ಬಗ್ಗೆ ನಿಧಾನ ನಿಲುವು ತಾಳಿದ್ದರಿಂದ, ರಾಜ್ಯ ಸರ್ಕಾರವು ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ, ಪರಿಹಾರವನ್ನು ಪಡೆದ ಬಗ್ಗೆ ವಿವರಣೆ ನೀಡಿದರು.

ಇನ್ನು ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅನರ್ಹರನ್ನು ಬಿಪಿಎಲ್ ಕಾರ್ಡ್‌ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯಕ್ಕೆ ನೀಡಲಾಗುವ ಎನ್‌ಡಿಆರ್‌ಎಫ್ ಪರಿಹಾರವನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಹಲವು ಬಾರಿ ಕೋರಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಹಾಗೂ ಕೇಂದ್ರ ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲಾಗಿದ್ದರೂ, ಇದುವರೆಗೂ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Tags:
error: Content is protected !!