ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಮತ್ತು ಹಾಸನದಲ್ಲಿ ಮಾ.26ರಿಂದ ಏ.1ರವರೆಗೆ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಬಿರುಗಾಳಿ, ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.
ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರದಲ್ಲಿ ಇಂದು (ಮಾ.26) ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.





