Mysore
22
mist

Social Media

ಗುರುವಾರ, 29 ಜನವರಿ 2026
Light
Dark

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ : ಎಚ್.ಡಿ .ದೇವೇಗೌಡ

ಬೆಂಗಳೂರು : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಘೋಷಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಅನಾರೋಗ್ಯದ ಕಾರಣದಿಂದ ಅವರು ಮನೆಯಲ್ಲೇ ಸ್ವೀಕರಿಸುವುದಾಗಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವೇಗೌಡರು, ಕನ್ನಡನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ನನಗಾಗಿ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣಕ್ಕೆ ಹಾಜರಾಗುತ್ತಿಲ್ಲದಿರುವುದಕ್ಕೆ ವೈಯಕ್ತಿಕವಾಗಿ ನನಗೆ ಬಹಳ ನೋವಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊಂಚ ಮಟ್ಟಿಗೆ ಅನಾರೋಗ್ಯ ಉಂಟಾಗಿ ದೇಹದಲ್ಲಿ ತುಸು ನಿತ್ರಾಣವಿದೆ. ವೈದ್ಯರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಈ ಕಾರ್ಯಕ್ರಮ ಪೂರ್ವನಿಗದಿಯಾಗಿರುವ ಕಾರಣಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಇವರೆಲ್ಲರ ಪ್ರೀತಿ, ವಿಶ್ವಾಸಕ್ಕೆ ದೇವೇಗೌಡರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ ಎಂದೇ ನಾನು ಭಾವಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!