ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯನವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗರ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುವ ಮೂಲಕ ನೊಂದ ಉಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದಿದ್ದಾರೆ.
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ
ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಯುವತಿ ಮನೆ ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ರಾತ್ರೋ ರಾತ್ರಿ ಆಕೆ ಪ್ರೀತಿಸಿದ ಯುವಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮನೆಯ ಬಾಗಿಲು ಮುರಿದು ಒಳಗೆ ಮನೆಯೊಳಗಿದ್ದ ಮಹಿಳೆಯನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಇನ್ನು ಘಟನಾಸ್ಥಳಕ್ಕೆ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗೃಹಸಚಿವ ಡಾ. ಜಿ ಪರಮೇಶ್ವರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆಕೆಯ ಆರೋಗ್ಯ ವಿಚಾರಿಸಿದ್ದಾರೆ.