ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರಿಗೆ ಪದೇ ಪದೇ ಕಾಂಗ್ರೆಸ್ ನಾಯಕರ ರಾಜೀನಾಮೆ ಕೇಳೋದು ಒಂತರ ಫ್ಯಾಷನ್ ಆಗಿಬಿಟ್ಟಿದೆ. ನಮ್ಮನ್ನು ರಾಜೀನಾಮೆ ಕೇಳುವ ಮೊದಲು ನಿಮ್ಮ ಬಿಜೆಪಿ ಪಕ್ಷದ ನಾಯಕರ ಇತಿಹಾಸ ತಿಳಿಯಿರಿ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
30 ಕೇಸ್‌ಗಳು ಯಾರ ಅವಧಿಯಲ್ಲಿ ದಾಖಲಾಗಿವೆ ಎನ್ನುವುದು ಗೊತ್ತು. ಗುತ್ತಿಗೆದಾರ ಸಚಿನ್ ಅವರ ವ್ಯವಹಾರದ ಬಗ್ಗೆ ಎಲ್ಲಾ ದಾಖಲೆಗಳಿವೆ. ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಮ್ಮ ಪಾತ್ರದ ಬಗ್ಗೆ ಏನಾದರು ನಿಮ್ಮಲ್ಲಿ ದಾಖಲೆ ಇದೆಯಾ ಎಂದು ಪ್ರಶ್ನಿಸಿದರು.
ಗುತ್ತಿಗೆದಾರ ಸಚಿನ್ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಇದ್ದ ಅವಧಿಯಲ್ಲೇ ಹೆಚ್ಚು ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.





