ರಾಜ್ಯ

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು,  ಸನ್ಮಾನ್ಯ ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನ: ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ.

ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ.

ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ “ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ?

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ.

ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ ಹದಿಮೂರು ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸು ಬರುತ್ತಿದೆ.

ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡಾ ಕೇಂದ್ರ ಸರ್ಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ.

ಆದರೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜೊತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ..

ಸನ್ಮಾನ್ಯ ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ‘’ನಾವು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಕನ್ನಡ-ಕರ್ನಾಟಕ ವಿರೋಧಿ ನಾಯಕನಿಗೆ ಈ ರೀತಿ ಶರಣಾಗುವುದು ಸಮಸ್ತ ಕನ್ನಡಿಗರಿಗೆ ಮಾಡುವ ದ್ರೋಹ ಎಂದು ನಿಮಗೆ ಅನಿಸಲಿಲ್ಲವೇ? ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ?

ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಾದೇಶಿಕ ಆಶೋತ್ತರಗಳನ್ನು ಪ್ರತಿಪಾದಿಸಿಕೊಂಡು ಕೇಂದ್ರದ ಅಧಿಪತ್ಯವನ್ನು ಪ್ರಶ್ನಿಸುತ್ತಾ ಬಂದ ದೇವೇಗೌಡರು ಈ ಇಳಿವಯಸ್ಸಿನಲ್ಲಿ ಈ ರೀತಿಯ ರಾಜಕೀಯ ರಾಜಿ ಮಾಡಿಕೊಳ್ಳುವಂತೆ ಮಾಡಿದ ಶಕ್ತಿ ಮತ್ತು ವ್ಯಕ್ತಿ ಯಾರೇ ಇರಬಹುದು, ಆದರೆ ದೇವೇಗೌಡರು, ಕೇವಲ ರಾಜಕೀಯ ಲಾಭಕ್ಕಾಗಿ ಮೈತ್ರಿ ಮಾಡಿಕೊಂಡು ಸಮಸ್ತ ಆರುವರೆ ಕೋಟಿ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದಾರೆ. ಈ ದ್ರೋಹಕ್ಕಾಗಿ ದೇವೇಗೌಡರು ಮತ್ತು ಅವರ ಪಕ್ಷ ಭಾರಿ ಬೆಲೆ ತೆರಲಿರುವುದು ಖಚಿತ ಎಂದು ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago