ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.
ಇಂದು ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
ಕುಂದಾನಗರಿ ಬೆಳಗಾವಿಯ ಸಿಪಿಇಡಿ ಮೈದಾನವು ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧವಾಗಿದೆ.
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಇನ್ನು ಈ ಸಮಾವೇಶಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಕಾರಣ ಗೈರಾಗಿದ್ದಾರೆ. ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 3500ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.