Mysore
29
few clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಯುವ ಸಮುದಾಯವನ್ನು ನಿರ್ಲಕ್ಷಿಸಿದರೆ ಜೋಕೆ! ಎಂದು ಎಚ್ಚರಿಕೆ ಸಂದೇಶವನ್ನು ಸರ್ಕಾರಕ್ಕೆ ರವಾನಿಸಲಾಯಿತು.

ಬೃಹತ್ ಪ್ರತಿಭಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಆಗಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದರು.

ಫೆಬ್ರವರಿ 24ರಂದು ಪ್ರತಿಭಟನೆ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘವು ಪೊಲೀಸ್ ಇಲಾಖೆಯಿಂದ ಅನುಮತಿ ಕೇಳಿತ್ತು, ಆದರೆ ಪೊಲೀಸರು ಪರವಾನಗಿ ನೀಡಲು ಹಿಂದೇಟು ಹಾಕಿದ್ದರು. ಆದರೆ, ಇದೇ ಉದ್ದೇಶಕ್ಕಾಗಿ ಬಿಜೆಪಿ ಮುಖಂಡರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಾತ್ರ ಅನುಮತಿ ನೀಡಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಶ್ರೀನಗರ ವೃತ್ತದ ಬಳಿ ಯುವಕರನ್ನು ತಡೆದು ನಿಲ್ಲಿಸಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರ ಫೋಟೋಗಳನ್ನು ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಖಾಲಿ ಹುದ್ದೆಗಳನ್ನು ತುಂಬುವಂತೆ ಮತ್ತು ವಯೋಮಿತಿ ಸಡಿಲಿಕೆ ಮಾಡುವಂತೆ ಆಗ್ರಹಿಸಿದರು. ಬ್ಯಾರಿಕೇಡ್‍ಗಳನ್ನು ತಳ್ಳಿ ಮುನ್ನುಗ್ಗಿದ ವಿದ್ಯಾರ್ಥಿಗಳು ರಾಲಿಯನ್ನು ಆರಂಭಿಸಿದರು. ಪೊಲೀಸರು ರಾಲಿಯನ್ನು ತಡೆಯಲು ಮುಂದಾಗಿದ್ದು, ಇದರಿಂದ ತಳ್ಳಾಟ ನೂಕಾಟ ನಡೆದಿದೆ. ಜೈನಗರ ಸರ್ಕಲ್‍ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಯಂತಹ ಸ್ಥಿತಿ ಉಂಟಾಯಿತು.

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಮತ್ತು ಯುವಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಇತರ ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಸೇವೆ ನಡೆಸಿ ತಮ ಅಸಮಾಧಾನ ಹೊರಹಾಕಿದರು. ಸರ್ಕಾರವು ಉದ್ಯೋಗ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ತಕ್ಷಣ ಸ್ಪಷ್ಟ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

 

Tags:
error: Content is protected !!