ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಂಸದೀಯ ರಾಜ್ಯ ಭಾಷಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮ ವಿರೋಧಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಒಂದು ಬ್ಯಾನರ್ ಮಾತ್ರ ಕಿತ್ತು ಹಾಕಿದ್ದಾರೆ. ಸುಳ್ಳು ಆರೋಪ ಹೊರಿಸಿ 41 ಜನ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸವನ್ನು ಸರ್ಕಾರ ಮಾಡಿದೆ.
ಇದನ್ನೂ ಓದಿ:-ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಹೋಟೆಲ್‍ವೊಂದರಲ್ಲಿ ಕೇಂದ್ರ ಸರ್ಕಾರದ ರಾಜ್ಯ ಭಾಷಾ ಸಮಿತಿ ಮೂರು ದಿನದ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಲಿ ಆರು ಜನ ಸಂಸದರು ಭಾಗಿಯಾಗಿದ್ದರು. ನಾವು ಹೋಗಿ ಕಾರ್ಯಕ್ರಮದ ಬ್ಯಾನರ್ ಹರಿದುಹಾಕಿದ್ದು ನಿಜ. ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ನಾಳೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 76 ಲಕ್ಷ ಕಾರ್ಯಕರ್ತರಿದ್ದಾರೆ. ಎಲ್ಲರನ್ನೂ ಜೈಲಿಗೆ ಕಳುಹಿಸಲು ಸಾದ್ಯವೇ? ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ತಮಿಳುನಾಡಿನ ಸಂಸದರು ಹಿಂದಿ ಹೇರಿಕೆ ಬಗ್ಗೆ ಪ್ರತಿಭಟಿಸುತ್ತಾರೆ. ಆದರೆ ನಮ್ಮ ಸಂಸದರು ಯಾವುದೇ ಪ್ರತಿಭಟನೆ ಮಾಡುವುದಿಲ್ಲ. ಕೂಡಲೇ ನಮ್ಮ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಹಿಂದಿ ಹೇರಿಕೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.





