ಕಲಬುರ್ಗಿ: ಕಲಬುರ್ಗಿ ನಗರವನ್ನು 1685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಲಬುರ್ಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕಲಬುರ್ಗಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದೆ. ಈ ಮೂಲಕ ಹಿಂದುಳಿದ ಜಿಲ್ಲೆಗಳಿಗೆ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಸ್ತೆ ಸಂಪರ್ಕ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಸುಧಾರಿಸಲು ಕಲ್ಯಾಣ ಪಥ ಎಂಬ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.
ಇದರ ಜೊತೆಗೆ ರಾಯಚೂರಿನಲ್ಲಿ ಏಮ್ಸ್ ಸಂಸ್ಥೆ ಸ್ಥಾಪಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ಸರ್ಕಾರ ಬದ್ಧವಿದೆ ಎಂದರು.
ಇನ್ನು ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಮೂಲಕ 2024-25ನೇ ಸಾಲಿನ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದರು.