ಕಲಬುರ್ಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಭೀಮ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ.
ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.
ಇದನ್ನು ಓದಿ : ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು
ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು, ವಿವರಗಳನ್ನು ನೀಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು.
ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು.





