ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ, ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ.
ಪ್ರಮುಖವಾಗಿ ಸ್ಥಳೀಯ ಅನುಷ್ಠಾನ ಆಡಳಿತದೊಂದಿಗೆ ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ ಡಾ.ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.