ಬೆಂಗಳೂರು: ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷದಂತೆ ಈ ಬಾರಿಯೂ ನೀಡುತ್ತಿದೆ. ಅದರಲ್ಲಿ 69 ಸಾಧಕರು ಈ ಪ್ರಶಸ್ತಿಗೆ ಭಾಜನಾರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಈ ಮಧ್ಯೆಯೇ ಸರ್ಕಾರ ಸಂಘ-ಸಂಸ್ಥೆಗಳು ಹಾಗೂ ವೈಯಕ್ತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 69 ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದೆ. ಅಲ್ಲದೇ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 50 ಪುರುಷ ಹಾಗೂ 50 ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಘೋಷಿಸಿದೆ.
ಕಲೆ, ಸಾಹಿತ್ಯ, ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಅದರಲ್ಲಿ ಪ್ರಮುಖವಾಗಿ ಕೃಷಿ ಕ್ಷೇತ್ರಕ್ಕೆ ಚಾಮರಾಜನಗರದ ಪುಟ್ಟೀರಮ್ಮ ಅವರು ಆಯ್ಕೆಯಾಗಿದ್ದು, ರಂಗಭೂಮಿ ಕ್ಷೇತ್ರದಲ್ಲಿ ಮೈಸೂರಿನ ಡಿ.ರಾಮು, ಜನಾರ್ಧನ್ ಎಚ್.(ಜನ್ನಿ), ಶಿಲ್ಪಕಲೆ ಕ್ಷೇತ್ರದಿಂದ ಅರುಣ್ ಯೋಗಿರಾಜ್, ಶಿಕ್ಷಣ ಕ್ಷೇತ್ರದಲ್ಲಿ ಕೊಡಗಿನ ಡಾ.ಪದ್ಮಾಶೇಖರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಇನ್ನು ಸಂಗೀತ ಕ್ಷೇತ್ರದಲ್ಲಿ ಮಂಡ್ಯದ ಪಿ.ರಾಜಗೋಪಾಲ್, ನೃತ್ಯ ಕ್ಷೇತ್ರದಲ್ಲಿ ಮೈಸೂರಿನ ವಿದುಷಿ ಲಲಿತಾ ರಾವ್, ವೈದ್ಯಕೀಯ ಕ್ಷೇತ್ರದಿಂದ ಮೈಸೂರು ನಾರಾಯಣ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.