ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಪತ್ರ ಬರೆದಿರುವ ನಾರಾಯಣಗೌಡ ಅವರು, ಭಾಷೆ ವಿಚಾರದಲ್ಲಿ ನಿಮ್ಮ ಅಧಿಕ ಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕ ಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ.
ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ. ಸಾಂವಿಧಾನಿಕ ಹೊಣೆಗಾರಿಕೆಯಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದಿದ್ದಾರೆ.





