ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದ ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ತನ್ನ ಪ್ರಣಾಳಿಕೆಯಲ್ಲಿ ಇದ್ದಂತೆ ಇದೀಗ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಸಲು ಮುಹೂರ್ತ ನಿಗದಿಪಡಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಯುವ ಜನರ ಮತ ಸೆಳೆಯಲು ರಾಜ್ಯ ಸರ್ಕಾರ ಈ ಉದ್ಯೋಗ ಮೇಳದ ಮೂಲಕ ಯೋಜನೆ ರೂಪಿಸಿದಂತಿದೆ.
ಹೌದು, ರಾಜ್ಯ ಸರ್ಕಾರ ಜನವರಿ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ನಡೆಸಲು ತೀರ್ಮಾನಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ನಡೆಸಲು 6 ಸಚಿವರ ತಂಡವನ್ನೂ ಸಹ ರಚಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ ಎಂಸಿ ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಉದ್ಯೋಗದಾತರೊಂದಿಗೆ ಸಂಪರ್ಕ ಬೆಳೆಸಿ, ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.