ಬೆಂಗಳೂರು: ತೀವ್ರ ಬೇಸಿಗೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಶೇ.31ರಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ.
ಪ್ರಸ್ತುತ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 277 ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಆದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 193 ಟಿಎಂಸಿ ಅಡಿಯಷ್ಟು ಮಾತ್ರ ನೀರಿನ ಸಂಗ್ರಹವಿತ್ತು.
ಹೀಗಾಗಿ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿರುವ ನೀರು ಮುಂಗಾರು ಮಳೆ ಆರಂಭದವರೆಗೂ ಸಾಕಾಗಲಿದೆ. ಕುಡಿಯುವ ನೀರು, ಕೃಷಿ ಹಾಗೂ ಜಲ ವಿದ್ಯುತ್ ಉತ್ಪಾದನೆಗೆ ಸದ್ಯಕ್ಕೆ ತೊಂದರೆ ಇಲ್ಲ. ಬೇಸಿಗೆ ಇನ್ನೂ 20 ದಿನಗಳು ಇರಲಿದೆ. ನೈರುತ್ಯ ಮುಂಗಾರು ಮಳೆ ಆರಂಭಕ್ಕೆ ಇನ್ನೂ ಮೂರು ವಾರಗಳು ಬಾಕಿ ಇವೆ.
ಪೂರ್ವ ಮುಂಗಾರು ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಆದರೆ, ಜಲಾಶಯಗಳು ಹಾಗೂ ಕೆರೆ, ಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಬಂದಿಲ್ಲ.
ಕಳೆದ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದ ಪರಿಣಾಮ ರಾಜ್ಯದ ಬಹುತೇಕ ಎಲ್ಲಾ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಈ ಬಾರಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.





