ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಕೊಲೆ ಮಾಡಿ ಪೊಲೀಸರ ಗುಂಡಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ತಿಳಿದಿರುವುದಿಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೇ ಈ ರೀತಿ ವರ್ತಿಸುತ್ತಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹೆಚ್ಚು ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕು. ಈ ಬಗ್ಗೆ ನಾವು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಇದರ ಬಗ್ಗೆ ಸುದೀರ್ಘ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.





