ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಲಿದೆ. ಆದರೆ, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಗದಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗಿದೆ. ಕಲಬುರಗಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಹಾಸನ, ಕೊಡಗು, ಮಂಡ್ಯ ರಾಮನಗರ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ.
ಅರಬ್ಬೀ ಸಮುದ್ರದ ಗೋವಾ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಮೇ.26ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಆಗಾಗ್ಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮಾಹಿತಿ ನೀಡಿದ್ದಾರೆ.





