ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ ಚರ್ಚಿಸಲು ಜ.18ರಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕಳೆದ ಡಿ.29 ರಂದು ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪದೋಷಗಳು ಕಂಡುಬಂದಿತ್ತು. ಈ ಬಗ್ಗೆ ಪರಿಶೀಲಿಸಿ, ಇನ್ನು ಮುಂದೆ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರು.
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೆಪಿಎಸ್‌ಸಿ ಕಾರ್ಯದರ್ಶಿ ರಣದೀಪ್ ಚೌಧರಿ, ಡಿಪಿಎಆರ್ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮತ್ತು ನಿರ್ದೇಶಕರ ಜೊತೆ ಇದೇ 18ರಂದು ಸಭೆ ನಡೆಸಲು ಮುಖ್ಯ ಕಾರ್ಯದರ್ಶಿ ನಿರ್ಧರಿಸಿದ್ದಾರೆ.