ಬಳ್ಳಾರಿ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮುರಿದು ಬಿದ್ದ ಅವಘಡಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ತುಂಗಭದ್ರಾ ಗೇಟ್ ಮುರಿದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು. ಇದರ ಜೊತೆಗೆ ನೀರಾವರಿ ಸಚಿವರಾದ ಡಿಕೆಶಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಲಾಶಯದ ಗೇಟ್ ಮುರಿದು ನೀರು ಖಾಲಿಯಾಗುತ್ತಿದೆ. ಇದರಿಂದ ರೈತರ ಬದುಕು ಹಸನಾಗುವ ಬದಲು ಹಾಳಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಕಳೆದ ಒಂದು ತಿಂಗಳಿನಿಂದಲೂ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದೆಲ್ಲಾ ಪರಿಸ್ಥಿತಿಗಳನ್ನು ಅವಲೋಕಿಸಿ ರಾಜ್ಯ ಸರ್ಕಾರ ಜಲಾಶಯಗಳ ಭದ್ರತೆ ಹಾಗೂ ಪ್ರವಾಹ ಹಾನಿ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿತ್ತು. ಇದನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಬೇಜಾವಾಬ್ದಾರಿ ವಹಿಸಿದ್ದಾರೆ ಎಂದು ಕಿಡಿಕಾರಿದರು.
ಡಿಕೆಶಿ ಬೇಜಾವಾಬ್ದಾರಿಯಿಂದಲೇ ಈ ಘಟನೆ ನಡೆದಿದೆ. ಆದ್ದರಿಂದ ಸಚಿವ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.





