ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದ್ದು, ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.13) ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಹೇಮಲತಾ ನಾಯಕ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ದೇವದಾಸಿ ಮಹಿಳೆಯರು ಗೌರವಯುತ ಜೀವನ ನಡೆಸುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು, ಅವರಿಗೂ ಸಿಗುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಎಲ್ಲಾ ಅರ್ಹ ಫಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಜಿ ದೇವದಾಸಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಪ್ರಸ್ತುತ 2,653 ದೇವದಾಸಿಯರಲ್ಲಿ 2550 ಮಹಿಳೆಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಅಲ್ಲದೇ 45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ತಲಾ 30 ಸಾವಿರದಂತೆ ಸಹಾಯಧನವನ್ನು ನೀಡಲಾಗುತ್ತಿದೆ ಎಂದಿದ್ದಾರೆ.
ಸಾಮಾನ್ಯ ಮಹಿಳೆಯರಂತೆಯೇ ಮಾಜಿ ದೇವದಾಸಿ ಮಹಿಳೆಯರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದ್ದು, ಮಾಜಿ ದೇವದಾಸಿ ವಸತಿ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ ಕಳೆದ 10 ವರ್ಷಗಳಲ್ಲಿ 823 ಮನೆಗಳು ಮಂಜೂರಾಗಿವೆ. ಅಲ್ಲದೇ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ, ಈ ಯೋಜನೆಯಡಿ ನಿವೇಶನ ಹೊಂದಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಗ್ರಾಮೀಣ ಪ್ರದೇಶದಲ್ಲಿ 1.75 ಲಕ್ಷ ರೂಪಾಯಿ ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.