ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಕಾನೂನು ಸೋಮವಾರದಿಂದ ರಾಜ್ಯದಲ್ಲಿ ಅಧಿಕೃತವಾಗಿ ಜಾರಿಗೆ ಬಂದಿದೆ.
ಸಾಮಾಜಿಕ ಬಹಿಷ್ಕಾರವನ್ನು ಅಪರಾಧವೆಂದು ಪರಿಗಣಿಸಿ ಶಿಕ್ಷೆ ವಿಧಿಸಲು ಅವಕಾಶ ನೀಡುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದು ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿದೆ.
ವ್ಯಕ್ತಿ, ವ್ಯಕ್ತಿಗಳ ಗುಂಪು, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರ ಹಾಗೂ ಅಪರಾಧ ತಡೆಗಟ್ಟಲು ಮತ್ತು ನಿರ್ಬಂಧಿಸಲು ಈ ಮಸೂದೆ ರೂಪಿಸಲಾಗಿದೆ. ಈ ಕೃತ್ಯಗಳಲ್ಲಿ ತೊಡಗುವವರಿಗೆ ದಂಡನೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡಲು ಅವಕಾಶ ಕಲ್ಪಿಸಲಾಗಿದೆ.
ದ್ವೇಷ ಅಪರಾಧ ಎಸಗಿದರೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಶಿಕ್ಷೆ ₹50 ಸಾವಿರ ದಂಡ ವಿಧಿಸಬಹುದಾಗಿದೆ. ಮತ್ತದೇ ಅಪರಾಧದಲ್ಲಿ ಭಾಗಿಯಾದರೆ 2-10 ವರ್ಷಗಳ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇದು ಸಂಜ್ಞೇ ಅಪರಾಧವಾಗಿರಲಿದ್ದು, ಜಾಮೀನುರಹಿತವಾಗಿರಲಿದೆ ಎಂದು ವಿವರಿಸಲಾಗಿದೆ.
ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕದಲ್ಲಿ, ಜಾತಿ ಅಥವಾ ಸಮುದಾಯ ಪಂಚಾಯಿತಿಯ ಮೂಲಕ ಬಹಿಷ್ಕಾರ ಹಾಕುವುದು ಇನ್ನೂ ಹಲವು ಸಮುದಾಯಗಳಲ್ಲಿ ಚಾಲ್ತಿಯಲ್ಲಿದೆ. ಇದರಿಂದ ಘನತೆಯಿಂದ ಜೀವನ ನಡೆಸುವುದಕ್ಕೆ ಹಲವು ಸಮುದಾಯಗಳಿಗೆ ಕಿರುಕುಳವಾಗುತ್ತಿದೆ. ಸಮಾಜದಲ್ಲಿ ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗುತ್ತಿದ್ದು, ಸೌಹಾರ್ದಕ್ಕೆ ಧಕ್ಕೆಯಾಗುತ್ತಿದೆ. ಇಂಥ ಅಸಾಂವಿಧಾನಿಕ ಆಚರಣೆಗಳನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಲಾಗಿದೆ.
ಈ ಬಗೆಯ ಬಹಿಷ್ಕಾರಕ್ಕೆ ಸಭೆ ಸೇರುವ ಅಥವಾ ಭಾಗವಹಿಸುವ ಪ್ರತಿಯೊಬ್ಬರಿಗೂ ₹1 ಲಕ್ಷ ದಂಡ ವಿಧಿಸಲು ಅವಕಾಶ ಮಾಡಿಕೊಡಲಾಗಿದೆ. ಇಂಥ ಅಪರಾಧದಲ್ಲಿ ಭಾಗವಹಿಸಲು ಪ್ರೇರಣೆ ಅಥವಾ ನೆರವು ನೀಡುವವರೆಗೆ 3 ವರ್ಷ ಜೈಲು ಮತ್ತು ₹1 ಲಕ್ಷ ದಂಡ ವಿಧಿಸಬಹುದಾಗಿದೆ. ಸಂತ್ರಸ್ತನ ಸಮ್ಮತಿಯೊಂದಿಗೆ ರಾಜೀ ಮಾಡಿಕೊಳ್ಳಲೂ ಅವಕಾಶ ಕಲ್ಪಿಸಲಾಗಿರುವ ಈ ಮಸೂದೆಯನ್ನು ಸಮಾಜ ಕಲ್ಯಾಣ ಮಂತ್ರಿ ಡಾ. ಎಚ್ ಸಿ ಮಹದೇವಪ್ಪ ಅವರು ಬೆಳಗಾವಿಯಲ್ಲಿ ಇತ್ತೀಚಿಗೆ ನಡೆದ ಚಳಿಗಾಲ ಅಧಿವೇಶನದ ವೇಳೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ
ಸರ್ವಾನುಮತದಿಂದ ಅಂಗೀಕಾರ ಪಡೆದುಕೊಂಡಿದ್ದರು.
ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಈ ಉದ್ದೇಶದಿಂದ ಸಭೆ, ಪಂಚಾಯಿತಿ, ಜಮಾವಣೆ, ಅಭಿಪ್ರಾಯ ಸಂಗ್ರಹಿಸುವುದು, ಬಹಿಷ್ಕಾರಕ್ಕೆ ಪ್ರತ್ಯಕ್ಷ, ಪರೋಕ್ಷ ಸಹಾಯ, ಒತ್ತಡ, ಪ್ರಚೋದನೆ ನೀಡುವವರನ್ನೂ ಅಪರಾಧಿಗಳೆಂದು ಪರಿಗಣಿಸಿ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಕೂಡಾ ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಈ ಕಾಯ್ದೆಯ ಅನ್ವಯ, ಬಹಿಷ್ಕಾರಕ್ಕೆ ಒಳಗಾದವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ದೂರು ನೀಡಬಹುದು. ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ. ನೇರವಾಗಿ ಸಲ್ಲಿಕೆಯಾದ ದೂರಿನ ತನಿಖೆ ನಡೆಸುವಂತೆ ನ್ಯಾಯಾಧೀಶರು ಆದೇಶ ನೀಡಬಹುದು. ಸಂತ್ರಸ್ತರಿಗೆ ಸಹಾಯ ಒದಗಿಸಲು ಮತ್ತು ದಂಡದ ಮೊತ್ತವನ್ನು ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು. ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸಿ ಆದೇಶಿಸಬಹುದು. ಸಾಮಾಜಿಕ ಬಹಿಷ್ಕಾರ ತಡೆ ಅಧಿಕಾರಿಗಳಾಗಿ ಗ್ರೂಪ್ ‘ಎ’ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಲಿದೆ.
ವಿಧೇಯಕದ ಮುಖ್ಯಾಂಶಗಳು
ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ ಜೈಲು ಶಿಕ್ಷೆ.
ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ, ಪಂಚಾಯಿತಿ ನಡೆಸಿದರೆ ಅಪರಾಧ.
ಬಹಿಷ್ಕಾರಕ್ಕೆ ಒತ್ತಡ ಹೇರುವುದು, ಬಹಿಷ್ಕಾರದ ಪರ ಮತ ಹಾಕುವುದು ಹಾಗೂ ಚರ್ಚೆಯಲ್ಲಿ ಪಾಲ್ಗೊಳ್ಳುವುದು ಅಪರಾಧ.
ಬಹಿಷ್ಕಾರಕ್ಕೆ ಒತ್ತಡ ಹೇರುವುದು, ಬಹಿಷ್ಕಾರದ ಪರ ಮತ ಹಾಕುವುದು ಹಾಗೂ ಚರ್ಚೆಯಲ್ಲಿ ಪಾಲ್ಗೊಳ್ಳುವುದು ಅಪರಾಧ.
ಬಹಿಷ್ಕಾರಕ್ಕೆ ಒಳಗಾಗುವವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಲು ಅವಕಾಶ.
ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸುವ ಆದೇಶ ಹೊರಡಿಸಲು ಅವಕಾಶ.
ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು ಅಪರಾಧ.
ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು ಅಪರಾಧ. ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು ಅಪರಾಧ. ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು ಅಪರಾಧ.
ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು ಅಪರಾಧ. ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು ಅಪರಾಧ.
ಮಾನವ ಹಕ್ಕುಗಳನ್ನು ನಿರಾಕರಿಸುವುದು, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಅಪರಾಧ.
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…