ಬೆಂಗಳೂರು: ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ಆದ್ದರಿಂದ ವಿರೋಧ ಪಕ್ಷದ ನಾಯಕನ ಸ್ಥಾನವ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕು ಎಂದು ನಾನು ಕೂಡ ಸಲಹೆ ನೀಡಿದ್ದೆ ಎಂದರು.
ಬಿಜೆಪಿ ಮತ್ತು ಮೋದಿಯನ್ನು ಎದುರಿಸಲು ನೀವೇ ವಿರೋಧ ಪಕ್ಷದ ನಾಯಕರಾಗಬೇಕು ಎಂದು ಕಾರ್ಯಕಾರಣಿ ಸಮಿತಿ ಹಾಗೂ ನಾನು ಕೂಡ ಒತ್ತಾಯ ಮಾಡಿದ್ದೆ. ಈಗ ಅವರು ಆ ಜವಾಬ್ದಾರಿ ವಹಿಸಿಕೊಂಡಿರುವುದು ನನಗೆ ತುಂಬಾ ಸಂತಸವಾಗಿದೆ ಎಂದರು.
ಮುಂದುವರಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ನಾಳೆ ದೆಹಲಿಗೆ ಹೋಗುತ್ತೇನೆ. ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ದೆಹಲಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದರು.