ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ಹಾಗೂ ಮಧ್ಯಂತರವಾಗಿ ಬಂಧನದಿಂದ ರಕ್ಷಣೆ ನೀಡಲು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಹೀಗಾಗಿ, ಶಾಸಕ ಬಸವರಾಜ್‌ಗೆ ಬಂಧನ ಭೀತಿ ಕಾಡುತ್ತಿದ್ದು, ಶುಕ್ರವಾರದಿಂದಲೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಿಗೆ ಭೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿರುವ ಸಿಐಡಿಯ ಪ್ರತ್ಯೇಕ ತಂಡಗಳು, ಶಾಸಕರ ಬಂಧನಕ್ಕೆ ಕಾರ್ಯಾಚರಣೆ ತೀವ್ರಗೊಳಿಸಿವೆ.





