Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ

ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ‘ಮಲೆಯಾಳಂ ಭಾಷಾ ಮಸೂದೆ-2025’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೇರಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಂ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಕಿಡಿಕಾರಿದ್ದಾರೆ.

ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಏನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ, ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಂ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು ಎಂದು ಹೇಳಿದ್ದಾರೆ.

ಕೇರಳ ಸರ್ಕಾರದ ಮಸೂದೆಗೆ ಪಕ್ಷಬೇಧ ಮರೆತು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಕೇರಳಕ್ಕೆ ಹೊಂದಿಕೊಂಡಿರುವ ಗಡಿಭಾಗಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಪರಿಗಣಿಸದಂತೆ ವಿದ್ಯಾರ್ಥಿಗಳ ಮೇಲೆ ಅನಗತ್ಯವಾಗಿ ಒತ್ತಡ ಹಾಕಬಾರದು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವರಾದ ಶಿವರಾಜ್ ತಂಗಡಗಿ, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕರು ಕೇರಳದ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಒತ್ತಾಯ
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾದ ಪ್ರಸ್ತಾಪಿತ ಮಲಯಾಳಿ ಭಾಷಾ ಮಸೂದೆ-2025ಗೆ ರಾಜ್ಯಪಾಲರು ಸಹಿ ಹಾಕದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾದ ಒತ್ತಾಯಿಸಿದೆ. ಅಧ್ಯಕ್ಷ ಡಾ.ಬಿಳಿಮಲೆ ಪುರುಷೋತ್ತಮ್ ನೇತೃತ್ವದ ನಿಯೋಗವು ಕೇರಳದ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ಅವರನ್ನು ಭೇಟಿಯಾಗಿ ವಿವಾದಾತ್ಮಕ ಭಾಷಾ ಮಸೂದೆ-2025ಕ್ಕೆ ಸಹಿ ಹಾಕಬಾರದು ಎಂದು ಆಗ್ರಹಿಸಿದೆ.

ಇದು ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಮಸೂದೆಯಾಗಿದೆ. ಒಂದು ವೇಳೆ ಕಾಯ್ದೆಯು ಜಾರಿಯಾದರೆ ಪ್ರಾದೇಶಿಕ ಭಾಷೆಗಳ ಅಸ್ತಿತ್ವವೇ ಇಲ್ಲದಂತಾಗುತ್ತದೆ. ಇದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ಮಸೂದೆಯಾಗಿರುವುದರಿಂದ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸುವಂತೆ ನಿಯೋಗ ಮನವಿ ಮಾಡಿದೆ.

ರಾಷ್ಟ್ರಪತಿ ಬಳಿಗೆ ನಿಯೋಗ
‘ಮಲೆಯಾಳಂ ಭಾಷಾ ಮಸೂದೆ-2025’ಕ್ಕೆ ಸಹಿ ಹಾಕದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಿಯೋಗವೊಂದು ಶೀಘ್ರದಲ್ಲೇ ದಿಲ್ಲಿಗೆ ತೆರಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಕೇರಳದ ಗಡಿ ಜಿಲ್ಲೆಯಲ್ಲಿ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನಡ ಭಾಷೆಯೊಂದಿಗೆ ಬೆರೆತು ಹೋಗಿದೆ. ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವೆ ವರ್ಷದ ಹಿಂದೆ ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ ಶಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಕಾಸರಗೋಡಿನ ಜನರ ಮನಸ್ಸು ಹಾಗೂ ಜೀವನ ಸಂಪೂರ್ಣ ಕನ್ನಡ ಭಾಷಾಮಯವಾಗಿದೆ. ಹೀಗಿದ್ದು ಕೇರಳ ಸರ್ಕಾರ ಇಂತಹ ಮಸೂದೆ ಜಾರಿಗೆ ತಂದಿರುವುದು ಸರಿಯಲ್ಲ ಎಂದು ತಂಗಡಗಿ ಆಕ್ಷೇಪಿಸಿದರು.

Tags:
error: Content is protected !!