ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್ ಶಾಕ್ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ಈ ವಿಚಾರ ಸದ್ಯ ಹೈಕಮಾಂಡ್ ಬುಡದಲ್ಲಿದ್ದು, ಡಿಸಿಎಂ ಆಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಚಿವರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಡಿಶಾದಲ್ಲಿ ಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಬದಲಾವಣೆ ಆಗುತ್ತದೆ. 8 ದಿನಗಳಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.