ಬೆಂಗಳೂರು: ಹಿಂದುಳಿದ ವರ್ಗಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಮುಂದಿನ ಲೋಕಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಿ ಎಂದು ಬಿಜೆಪಿ ಸವಾಲು ಹಾಕಿದೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಆದಿವಾಸಿಗಳು ಮುಖ್ಯಮಂತ್ರಿಗಳಾಗಿದ್ದಾರೆ. ಅದೇ ರೀತಿ ನಾಲ್ಕು ರಾಜ್ಯಗಳಲ್ಲಿ ನಾವು ಹಿಂದುಳಿದವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದೇವೆ. ನಿಮಗೆ ನಿಜವಾದ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಡಾ.ಎಪಿಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದು ಬಿಜೆಪಿ. ಆದಿವಾಸಿ ಸಮುದಾಯಕ್ಕೆ ಸೇರಿದ ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ನೇಮಕ ಮಾಡಿದ್ದು ನಮ್ಮ ಪಕ್ಷ. ನಾವು ಹೇಗೆ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ವಿರೋಧಿಗಳಾಗುತ್ತೇವೆ ಎಂದು ಪ್ರಶ್ನೆ ಮಾಡಿದರು.
ಕಾಂಗ್ರೆಸ್‌ಗೆ ದಲಿತರು, ಹಿಂದುಳಿದ ಅಲ್ಪಸಂಖ್ಯಾತ ವರ್ಗದವರ ಮೇಲೂ ಕಾಳಜಿ ಇಲ್ಲ. ಕೇವಲ ಮೊಸಳೆ ಕಣ್ಣೀರು. ಇದನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಒಪ್ಪುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.





