ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಮತ್ತು ಗಣೇಶೋತ್ಸವದ ಕಾರಣಕ್ಕಾಗಿ ಅಂದು ನಗರ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಅಂದು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹಗಳ ವಿಸರ್ಜನೆಯ ಶೋಬಾಯಾತ್ರೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಸಮಯದಲ್ಲಿ ಹೆಚ್ಚಿನ ಜನದಟ್ಟಣೆ ಹಾಗೂ ವಾಹನಗಳ ಸಂಚಾರವು ಕೂಡ ಹೆಚ್ಚಾಗಿರುವ ಕಾರಣ ಯಾವುದೇ ಅನಾಹುತಗಳು ಸಂಭವಿಸದಿರಲೆಂದು ಪೊಲೀಸ್ ಇಲಾಖೆಯ ಮಾಹಿತಿಯಂತೆ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ ಎಂದರು.
ಅಂದು ಮಕ್ಕಳ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.