ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಮುಡಾ ಹಗರಣ ಕಾವು ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಪ್ರಕರಣದ ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂಗೆ ಈ ಪ್ರಕರಣ ಕುರಿತಂತೆ ತೀವ್ರ ಬೇಸರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡರಿಗೆ ರಾಜೀನಾಮೆ ನೀಡಲು ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮರಿಗೌಡ, ರಾಜೀನಾಮೆ ಬಗ್ಗೆ ಚರ್ಚೆ ನಡೆಸಿದ್ದರು.
ಬಳಿಕ ನಗರಾಭಿವೃದ್ಧಿ ಕಾರ್ಯದರ್ಶಿ ದೀಪಾ ಚೋಳನ್‌ಗೆ ಮರಿಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ಮರಿಗೌಡ ಮಾಹಿತಿ ನೀಡಿದ್ದಾರೆ.