Mysore
17
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಸಚಿವ ಕೆ.ಜೆ.ಜಾರ್ಜ್

K J George

ಚಿಕ್ಕಮಗಳೂರು : ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಮಾತ್ರವಲ್ಲದೆ, ನೆರೆಯ ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಿಗೆ ಅನ್ವಯವಾಗುವಂತೆ ಕಾಡಾನೆ ನಿಯಂತ್ರಣಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅನುಪಾಲನಾ ವರದಿಯ ಆಧಾರದ ಮೇಲೆ ಸಭೆ ನಡೆಸುವಂತೆ ಕೆಲವು ಶಾಸಕರು ಸಲಹೆ ನೀಡಿದರು. ಆದರೆ, ವಿಧಾನಪರಿಷತ್‌ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಅವರು ಕಾಡಾನೆಗಳ ಉಪಟಳ ನಿಯಂತ್ರಣ ಕುರಿತಂತೆ ಚರ್ಚೆಗೆ ಮನವಿ ಮಾಡಿದರು. ಅಲ್ಲದೆ, ಪ್ರಮುಖವಾಗಿ ಮೂಡಿಗೆರೆ ತಾಲೂಕಿನಲ್ಲಿ 55 ಕಾಡಾನೆಗಳು ನಾಲ್ಕೈದು ಗುಂಪುಗಳಲ್ಲಿ ಓಡಾಡುತ್ತಿವೆ. ಇವುಗಳಿಂದಾಗಿ ರೈತರು, ಕಾಫಿ ಬೆಳೆಗಾರರಿಗೆ ಅಪಾರ ಹಾನಿಯಾಗಿದೆ. ಜನ ವಸತಿ ಪ್ರದೇಶಕ್ಕೂ ಬಂದು ತೊಂದರೆ ನೀಡುತ್ತಿವೆ ಎಂದು ಪ್ರಾಣೇಶ್ ಹೇಳಿದರು.

ಕಾಡಾನೆಗಳ ಕುರಿತು ಮಾಹಿತಿ ನೀಡಿದ ಚಿಕ್ಕಮಗಳೂರು ಡಿಎಫ್‌ಓ ರಮೇಶ್‌ ಬಾಬು, ಚಿಕ್ಕಮಗಳೂರು ವಲಯದಲ್ಲಿ 35, ಕೊಪ್ಪ ವಲಯದಲ್ಲಿ 125, ಭದ್ರಾ ವನ್ಯಜೀವಿ ವಿಭಾಗದಲ್ಲಿ 400 ಕಾಡಾನೆಗಳು ಇವೆ. ಕಳೆದ 2-3 ವರ್ಷಗಳಿಂದ ಹಾಸನ ಜಿಲ್ಲೆಯ ಸಕಲೇಶಪುರದಿಂದ ಮೂಡಿಗೆರೆ ತಾಲೂಕಿಗೆ ಕಾಡಾನೆಗಳ ಹಿಂಡು ಬರುತ್ತಿವೆ. ಪ್ರಸ್ತುತ ನಾಲ್ಕೈದು ಗುಂಪುಗಳು ಓಡಾಡುತ್ತಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲು ಕೆಲವು ಆನೆಗಳಿಗೆ ಕಾಲರ್‌ ಐಡಿ ಹಾಕಲಾಗಿದೆ ಎಂದು ಹೇಳಿದರು.
ಮಧ್ಯೆಪ್ರವೇಶಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಡಾನೆಗಳಿಗೆ ಕಾಡಿನಲ್ಲಿಯೇ ಬೇಕಾಗುವಷ್ಟು ಆಹಾರ ಸಿಕ್ಕಿದರೆ ಅವುಗಳು ಜನ ವಸತಿ ಪ್ರದೇಶಕ್ಕೆ ಬರುವುದಿಲ್ಲ. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯಲ್ಲಿ ಕಾರ್ಯ ಯೋಜನೆ ರೂಪಿಸಬೇಕು ಎಂದು ಸಲಹೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಕಾಡಿನಿಂದ ಜನವಸತಿ ಪ್ರದೇಶಗಳು ಮತ್ತು ಕೃಷಿ ಜಮೀನುಗಳಿಗೆ ಬರುವ ಕಾಡಾನೆಗಳನ್ನು ಹಿಮ್ಮೆಟ್ಟುವ ಕೆಲಸ ಇಲಾಖೆಯಿಂದ ಆಗುತ್ತಿದೆ. ಸೆರೆ ಸಿಕ್ಕ ಆನೆಗಳನ್ನು ಬಿಡಾರಕ್ಕೆ ಬಿಡಲು ಭದ್ರಾ ವನ್ಯಜೀವಿ ವಿಭಾಗದಲ್ಲಿ ಆನೆಗಳ ಧಾಮವನ್ನು ನಿರ್ಮಾಣ ಮಾಡು ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಈ ವೇಳೆ ಶಾಸಕಿ ನಯನಾ ಮೋಟಮ್ಮ ಮಧ್ಯೆಪ್ರವೇಶಿಸಿ, ಸ್ಥಳೀಯವಾಗಿ ಓಡಾಡುತ್ತಿರುವ ಆನೆಗಳಿಂದ ಜನರಿಗೆ ಯಾವುದೇ ತೊಂದರೆ ಆಗುತ್ತಿಲ್ಲ, ಹಾಸನ ಜಿಲ್ಲೆಯಿಂದ ಹಿಂಡು ಹಿಂಡಾಗಿ ಬರುತ್ತಿರುವ ಆನೆಗಳಿಂದ ತೊಂದರೆಯಾಗುತ್ತಿದೆ ಎಂದಾಗ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ದನಿಗೂಡಿಸಿ, ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾದರೆ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಆನೆಗಳಿಗೆ ಕಾಡಿನಲ್ಲಿ ಆಹಾರ ಸಿಗುತ್ತಿಲ್ಲ. ಹಣ್ಣಿನ ಮರಗಳು ಹಾಗೂ ಬಿದಿರು ಬೆಳೆಸಬೇಕು ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಹೇಳಿದಾಗ, ಈ ವರ್ಷ 30 ಸಾವಿರ ಬಿದಿರು ಸಸಿಗಳನ್ನು ನಡೆಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಡಿಎಫ್‌ಓ ರಮೇಶ್‌ ಬಾಬು ಹೇಳಿದರು.

ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಸಚಿವ ಕೆ.ಜೆ. ಜಾರ್ಜ್‌ ಅವರು, ಆನೆಗಳು ನಾಡಿಗೆ ನುಗ್ಗುವುದನ್ನು ನಿಯಂತ್ರಿಸುವ ಸಂಬಂಧ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದಾದ ಬಳಿಕ ಅನುಪಾಲನಾ ವರದಿ ಆಧಾರದ ಮೇಲೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಕೆ.ಎಸ್‌.ಆನಂದ್‌, ಶ್ರೀನಿವಾಸ್‌, ಎಚ್‌.ಡಿ.ತಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ.ರೇವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌. ಕೀರ್ತನಾ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಉಪಸ್ಥಿತರಿದ್ದರು.

Tags:
error: Content is protected !!