ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯ ಉಂಟಾಗುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ದೇಶಾದ್ಯಂತ ಅಕ್ಟೋಬರ್‌ನಲ್ಲಿ ದೀರ್ಘಾವಧಿಯ ಸರಾಸರಿ 75.4 ಮಿಲಿ ಮೀಟರ್‌ಗಿಂತ 115 ಪ್ರತಿಶತಕ್ಕಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಪಾತ್ರ ಮಾಹಿತಿ ನೀಡಿದ್ದಾರೆ.





