ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮಿತಿ ಮೀರಿದ್ದು, ಇವುಗಳ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದು, ನೋಂದಣಿಯಾಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ನಡೆದ ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ಕ್ಲಾಸ್ ತೆಗೆದುಕೊಂಡರು.
ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಾ? ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ? ಆರ್‌ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಮಾಡಿಸುತ್ತಿಲ್ಲ ಏಕೆ ಎಂದು ಕಂಪನಿಗಳ ಮುಖ್ಯಸ್ಥರನ್ನು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಮೈಕ್ರೋ ಕಂಪನಿಯವರು, ಆರ್‌ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಉತ್ತರಿಸಿದರು
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ವರದಿಗಳು ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.