ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಯಿಂದ ರಾಜ್ಯದಲ್ಲಿ ಹಲವಾರು ಜನತೆ ತಮ್ಮ ಹುಟ್ಟಿದ ಊರು ತೊರೆಯುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ.25ರಂದು ಗೃಹ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಸರ್ಕಾರದ ಅಪರ ಕಾರ್ಯದರ್ಶಿ ಕೆ. ಚಿರಂಜೀವಿ ಅವರು ಸಭೆಗೆ ಸಂಬಂಧಿಸಿದ ಸೂಚನಾ ಪತ್ರ ಪ್ರಕಟಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳಿಗೆ ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಸಾರ್ವಜನಿಕರು ಊರು ಬಿಡುವ ಸನ್ನಿವೇಶ ಹಲವು ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಶನಿವಾರ ಬೆಳಿಗ್ಗೆ 11ಕ್ಕೆ ಸಭೆ ಕರೆದಿದ್ದು, ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.