ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೇ ಬಿಜೆಪಿ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಹಾಗೂ ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಹೀಗಾಗಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಯಾವುದೇ ಪೂರಕ ಸಾಕ್ಷ್ಯಗಳಿದ್ದರೆ ನಾವು ಸ್ವೀಕರಿಸುತ್ತೇವೆ ಎಂದು ಹೇಳಿದರು.
ಇನ್ನು ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧ ಮಾಜಿ ಸಂಸದ ಡಿ.ಕೆ.ಸುರೇಶ್ ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸರ್ಕಾರ ಇದರಲ್ಲಿ ಭಾಗಿಯಾಗಲ್ಲ ಎಂದು ಸ್ಪಷ್ಟಪಡಿಸಿದರು.





