ಗದಗ: ಸಂಸದ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಧ್ವನಿ ಎತ್ತಲಿ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂಬ ಸಂಸದ ಜಗದೀಶ್ ಶೆಟ್ಟರ್ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಈ ಹಿಂದೆ ರಾಜ್ಯದಲ್ಲಿ ತೀವ್ರ ಬರಗಾಲ ಇದ್ದಾಗಲೂ ಕೇಂದ್ರ ಸರ್ಕಾರ ಪರಿಹಾರ ನೀಡಲಿಲ್ಲ. ಸುಪ್ರೀಂ ಕೋರ್ಟ್‌ಗೆ ಹೋದರೂ ರಾಜ್ಯಕ್ಕೆ ಪರಿಹಾರದ ಹಣ ಸಿಗಲಿಲ್ಲ ಎಂದರು.
ಇನ್ನು ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಹಣ ತಾಂತ್ರಿಕ ಕಾರಣದಿಂದ ವಿಳಂಬ ಆಗಿದೆಯೇ ಹೊರತು ಹಣದ ಕೊರತೆಯಿಂದಲ್ಲ. ಈ ಎರಡೂ ಯೋಜನೆಗಳ ಹಣವನ್ನು ಪ್ರತಿ ತಿಂಗಳು ನಿರಂತರವಾಗಿ ಮುಟ್ಟಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.





