ಕಲಬುರ್ಗಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಏಕೆ ರಾಜೀನಾಮೆ ಕೊಡಬೇಕು. ಪ್ರಿಯಾಂಕ್‌ಗೂ ಸಚಿನ್ ಆತ್ಮಹತ್ಯೆಗೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಗರಿಗೆ ಸಾರ್ವಜನಿಕ ಹಿತಾಸಕ್ತಿ ಇದೆಯಾ? ಬಿಜೆಪಿಯಷ್ಟು ಭ್ರಷ್ಟ ಸರ್ಕಾರ ಇನ್ನೊಂದಿಲ್ಲ. ಭ್ರಷ್ಟ ಬಿಜೆಪಿ ನಮಗೆ ಪಾಠ ಮಾಡಲು ಬರೋದು ವಿಪರ್ಯಾಸ. ವಿರೋಧ ಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬೆಳವಣಿಗೆಯನ್ನು ಸಹಿಸದೇ ಬಿಜೆಪಿ ನಾಯಕರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.





