ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಹಾಗೂ ಮಂಗಳಸೂತ್ರ ತೆಗೆಸಬಾರದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು, ಹಿಂದುಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಈ ಆದೇಶವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಹಾಗೂ ಆಭರಣಗಳನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್‌ನಲ್ಲಿ ಸ್ಪಷ್ಟನೆ ನೀಡಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು, ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ ಟಿಕೆಟ್‌ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.





