ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರವರ ವಿರುದ್ಧದ ರಾಜಕೀಯ ದ್ವೇಷವನ್ನು ಬಿಟ್ಟು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು ಎಂದು ಬಿಜೆಪಿ ಶಾಸಕ ಸಿ.ಎನ್.ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ನ.29) ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಪ್ರತಿನಿತ್ಯ ಬೆಳಿಗ್ಗೆ ಎದ್ದರೆ ಸಾಕು ಭ್ರಷ್ಟಾಚಾರ ಹಾಗೂ ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆ ಆಗುತ್ತಿದೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿ ತಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಸಚಿವ ಸಂಪುಟ ಸಭೆಯಲ್ಲಿ ತನಿಖೆ ಅಗತ್ಯವೆಂದು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದೆ ಎಂದು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಮೇಲೆ ತನಿಖೆ ಆರಂಭಿಸಿದ್ದಾರೆ. ಆದರೆ ಈಗಾಗಲೇ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ಮಾಡಿ ಒಂದೂವರೆ ವರ್ಷ ಆಗಿದೆ. ಈ ಮಧ್ಯೆ ಬಿಎಸ್‌ವೈ ವಿರುದ್ಧ ಸರ್ಕಾರ ತನಿಖೆ ಮಾಡಲೇಬೇಕೆದು ಚಿಂತಿಸಿ ಎಸ್‌ಐಟಿ ತನಿಖೆಗಳು ಆಗುವಂತೆ ಮಾಡಿದೆ. ಹೀಗಾಗಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ
ಎಂಬಂದು ಸ್ಪಷ್ಟವಾಗಿ ಕಾಣುತ್ತಿದ್ದು, ದ್ವೇಷದ ರಾಜಕೀಯ ಬಿಟ್ಟು ಆಡಳಿತದಲ್ಲಿ ಹೇಗೆ ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂಬುದರ ಕುರಿತು ಚಿಂತಿಸಬೇಕು ಎಂದು ಎಚ್ಚರಿಸಿದ್ದಾರೆ.