ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಕಳೆದ ಕೆಲ ದಿನಗಳಿಂದ ಜೈಲು ಪಾಲಾಗಿ ಇಂದು ಬಿಡುಗಡೆಯಾಗಿರುವ ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಸೂರಜ್ ರೇವಣ್ಣ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದರು. ನಿನ್ನೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಸೂರಜ್ ರೇವಣ್ಣ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರು, ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದಲೇ ನನ್ನ ಮೇಲೆ ಕೇಸ್ ದಾಖಲಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದು ಕೇಸ್ ಅಲ್ಲ ಷಡ್ಯಂತ್ರ. ಶಿವಕುಮಾರ್ ನನ್ನ ಆಪ್ತ ಸಹಾಯಕನಲ್ಲ, ಕಾರು ಚಾಲಕನೂ ಅಲ್ಲ. ನಮಗೆ ಲೋಕೇಶ್ ಅಂತಾ ಒಬ್ಬನೇ ಕಾರು ಚಾಲಕ ಇರೋದು. ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರವಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.