ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್ ಅವರು, ಮೈಸೂರು ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.
ದೇಶ-ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗಲು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಮಾಡಲೇಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 46 ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಭೂಸ್ವಾಧೀನಕ್ಕೆ ವಿಶೇಷ ಜಿಲ್ಲಾಧಿಕಾರಿಗಳ ಒಪ್ಪಿಗೆ ದೊರೆತಿದೆ. ಭೂ ಮಾಲೀಕರಿಗೆ ವೆಚ್ಚ ಪಾವತಿಸಿದ ನಂತ ಹಸ್ತಾಂತರ ಪ್ರಕ್ರಿಯೆ ಸರಾಗವಾಗಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ನಂತರ ಭೂಮಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಹಸ್ತಾಂತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯರಿಗೆ ಮನವರಿಕೆ ಮಾಡಿಕೊಟ್ಟರು.