ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ನಾವು ದೇಸಾಯಿ ಆಯೋಗ ರಚಿಸಿದ್ದೆವು. ವರದಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಕುಟುಂಬದ ಮೇಲೆ ಯಾವುದೇ ಆರೋಪವಿಲ್ಲ. ಅದನ್ನು ವರದಿಯಲ್ಲಿ ಅವರು ಉಲ್ಲೇಖಿಸಿದ್ದಾರೆ. ಅಧಿಕಾರಿಗಳ ಮೇಲೆ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಇದರ ಬಗ್ಗೆ ಸಂಪುಟ ಸಭೆ ಒಪ್ಪಿಕೊಂಡಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ಹೇಳಿದರು.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಅವರು, ಈ ಮಾಹಿತಿ ನೀಡಿದರು.
ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 60 ಕ್ರಿಮಿನಲ್ ಮೊಕದ್ದಮೆಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿಗಳ ಅವ್ಯವಹಾರ/ಭ್ರಷ್ಟಾಚಾರದ ಆರೋಪಗಳ ಕುರಿತು ‘ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್, ಆಯೋಗದ ವಿಚಾರಣಾ ವರದಿಯನ್ನು ಸ್ವೀಕಾರ ಮಾಡಿದ್ದೇವೆ. ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ವರ್ಷಾಂತ್ಯಕ್ಕೆ ಜಿಪಂ, ತಾಪಂ ಚುನಾವಣೆ!
ಇನ್ನು, ರಾಜ್ಯದ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಶೀಘ್ರದಲ್ಲಿ ನಡೆಯಲಿದೆ. ಈಗಾಗಲೇ ಚುನಾವಣೆಗೆ ನಾಲ್ಕು ವರ್ಷ ತಡವಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪ್ರಕ್ರಿಯೆ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣೆಗೆ ಎರಡು – ಮೂರು ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದಿದ್ದರು. 2025ರ ವರ್ಷಾಂತ್ಯದೊಳಗೆ ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್ ವೇಳೆಗೆ ಚುನಾವಣೆಯ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದ್ದು, ಡಿಸೆಂಬರ್‌ನಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಈಗಾಗಲೇ ಚುನಾವಣಾ ಆಯೋಗ ಕೂಡ ಅಗತ್ಯ ಸಿದ್ಧತೆ ನಡೆಸಿದ್ದು, ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಇತ್ತೀಚೆಗೆ ಮಾಹಿತಿ ನೀಡಿದ್ದರು.





