ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಯ ಆದೇಶವನ್ನು ಕಾಯ್ದಿರಿಸಿದೆ.
ಈ ವಿಚಾರವಾಗಿ ಧಾರವಾಡದ ಹೈಕೋರ್ಟ್‌ನಲ್ಲಿ ಇಂದು(ಜನವರಿ.27) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ವಿಚಾರಣೆ ನಡೆಸಿದೆ. ಈ ವೇಳೆ ಸ್ನೇಹಮಯಿ ಕೃಷ್ಣ ಪರ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ಪ್ರತಿವಾದಗಳನ್ನು ಆಲಿಸಿದ ಬಳಿಕ ಸಿಬಿಐ ತನಿಖೆಗೆ ನೀಡುವ ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದೆ.
ಇನ್ನೂ ಮುಡಾ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸುವವರೆಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತಿಲ್ಲ ಎಂದು ಸೂಚನೆ ನೀಡಿದೆ.