ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಇಂದು(ಜನವರಿ.27) ಧಾರವಾಡ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಮಧ್ಯೆಯೇ ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಅವರು ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಸಿಬಿಐ ತನಿಖೆಗೆ ಕೋರಿರುವ ಅರ್ಜಿಯೂ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಅರ್ಜಿಯನ್ನು ವಿಚಾರಣೆಗೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂಧರ್ ಸಿಂಗ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ನ್ಯಾಯವನ್ನು ಎತ್ತಿ ಹಿಡಿಯಲು ಸಿಬಿಐ ತನಿಖೆ ಅನಿವಾರ್ಯ. ಹೀಗಾಗಿ ಈ ಹಗರಣದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.