Mysore
21
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮುಡಾ ಹಗರಣ| ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಇದೇ ವೇಳೆ ಎರಡು ತಿಂಗಳೊಳಗೆ ತನಿಖಾ ವರದಿಉನ್ನು ಪೂರ್ಣಗೊಳಿಸುವಂತೆ ಲೋಕಾಯುಕ್ತ ತನಿಖಾ ಅಧಿಕಾರಿಗಳಿಗೆ ಸೂಚಿಸಿರುವ ನ್ಯಾಯಾಲಯ ಅಂತಿಮ ಆದೇಶವನ್ನು ಇದೇ ತಿಂಗಳ.15ರಂದು ಪ್ರಕಟಿಸುವುದಾಗಿ ತಿಳಿಸಿದೆ.

ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಇಂದು ಅಂತಿಮ ಆದೇಶ ನೀಡುವುದಾಗಿ ತಿಳಿಸಿತ್ತು. ಬುಧವಾರ ವಿಚಾರಣೆ ಸಂದರ್ಭದಲ್ಲಿ ಆದೇಶವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು. ಆದರೆ, ಬೆಂಗಳೂರು ವಿಶೇಷ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಅಂತಿಮ ಆದೇಶವನ್ನು ಆ.15ಕ್ಕೆ ಕಾಯ್ದಿರಿಸಿದ್ದಾರೆ.

ಇದನ್ನು ಓದಿ : ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ಮುಡಾದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿರುವ ಬಿ ರಿಪೋರ್ಟ್ ತಿರಸ್ಕರಿಸಬೇಕು. ಪ್ರಕರಣದ ತನಿಖಾಧಿಕಾರಿಯಾಗಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್, ಸರಿಯಾದ ತನಿಖೆ ಮಾಡದೆ ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಹೀಗಾಗಿ ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ವಿರುದ್ಧ ಇ.ಡಿ. ಆರಂಭಿಸಿರುವ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್ ಕೂಡ ಇ.ಡಿ. ಪ್ರಕಣವನ್ನು ರದ್ದು ಮಾಡಿತ್ತು.
ಮುಡಾ ಹಗರಣ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟುಂಬಸ್ಥರ ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳ ಕೊರತೆಯಿಂದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ಸಲ್ಲಿಸಿದ್ದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆಗಳು ಒಳಗೊಂಡಂತೆ ವಿವಿಧ ಐಪಿಸಿ ಸೆಕ್ಷನ್‌ಗಳಡಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಸುಮಾರು 11,200 ಪುಟಗಳ 27 ಸಂಪುಟ ಹೊಂದಿರುವ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದರು. ಇದನ್ನು ಪ್ರಶ್ನಿಸಿ ಸ್ನೇಹಮಹಿ ಕೃಷ್ಣ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದರು.

Tags:
error: Content is protected !!