ಬೆಂಗಳೂರು: ಮುಡಾ ಹಗರಣ ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಜಂಟಿ ಮೈಸೂರು ಚಲೋ ಪಾದಯಾತ್ರೆಗೆ ಕೆಂಗೇರಿಯಲ್ಲಿ ಇಂದು(ಆ.3) ಚಾಲನೆ ನೀಡಲಾಯಿತು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಆಶೋಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬೆಂಗಳೂರಿನ ಕೆಂಗೇರಿ ಕೆಂಪಮ್ಮ ದೇಗುಲ ಬಳಿ ಉದ್ಘಾಟನೆಗೊಂಡ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ, ಡಿವಿ ಸದಾನಂದಗೌಡ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮೈತ್ರಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ವೇಳೆ ಮೈತ್ರಿ ಪಾದಯಾತ್ರೆಯ ಗೀತೆಯನ್ನು ಮಾಜಿ ಸಿಎಂ ಹಾಗೂ ಸಂಸದ ಬಸವರಾಜು ಬೊಮ್ಮಾಯಿ ಬಿಡುಗಡೆ ಮಾಡಿದರು. ಈ ಪಾದಯಾತ್ರೆಯು 8ದಿನಗಳ ಕಾಲ ನಡೆಯಲಿದೆ. ಅಂತಿಮವಾಗಿ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.





