ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾಗಿದ್ದಾರೆ.
ಬಳಿಕ ಅವರು ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಕ್ಷೇತ್ರ ಉಳಿಸಿಕೊಳ್ಳಲೇಬೇಕೆಂದು ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ.
ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಜೆಡಿಎಸ್‌ನಿಂದ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.
ಈ ಎಲ್ಲಾ ರಾಜಕೀಯ ಬೆಳವಣಿಗೆಗೆ ನಡುವೆ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.
ಈ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮ್ಮ ಕುಟುಂಬದ ಯಾರೂ ಕೂಡ ರಾಜಕೀಯಕ್ಕೆ ಬರಲ್ಲ. ಈ ಬಗ್ಗೆ ಬಹಳ ಹಿಂದೆಯೇ ಹೇಳುತ್ತಿದ್ದೇನೆ. ಆದರೂ ಈ ಬಗ್ಗೆ ಆಗಾಗ ವದಂತಿ ಸೃಷ್ಟಿಯಾಗುತ್ತಿದೆ. ಆದರೂ ಈ ಬಗ್ಗೆ ಆಗಾಗ ವದಂತಿ ಸೃಷ್ಟಿಯಾಗುತ್ತಿದೆ. ಈ ವದಂತಿಗಳಿಗೆಲ್ಲಾ ಯಾರೂ ಕಿವಿಗೊಡಬೇಡಿ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದರು.



