ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ವಿಚಾರಣೆ ಜನವರಿ.27ಕ್ಕೆ ಮುಂದೂಡಿಕೆಯಾಗಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಸುದೀರ್ಘ ವಾದ ಹಾಗೂ ಪ್ರತಿವಾದ ಆಲಿಸಿತು. ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಅವರ ಪ್ರತಿವಾದ ಆಲಿಸಿತು.
ಈ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರ ವಕೀಲರು ಸಮಯ ಕೇಳಿದ್ದು, ಮನವಿ ಪರಿಗಣಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜನವರಿ.27ಕ್ಕೆ ಮುಂದೂಡಿಕೆ ಮಾಡಿದೆ.
ಮೈಸೂರು ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯ ಪತ್ನಿ ಮೇಲಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ.
ಆದರೆ ಇದಕ್ಕೆಲ್ಲಾ ವಿರೋಧ ವ್ಯಕ್ತಪಡಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತದಲ್ಲಿ ಸರಿಯಾದ ತನಿಖೆ ನಡೆಸಿಲ್ಲ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಧ್ಯ ಪ್ರವೇಶಿಸಬೇಕು. ಮುಡಾ ಹಗರಣ ಸಂಬಂಧ ಸಿಬಿಐ ತನಿಖೆಯಾಗಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಚಾರಣೆಯನ್ನು ಜನವರಿ.27ಕ್ಕೆ ಮುಂದೂಡಿಕೆ ಮಾಡಿದೆ.