ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿರೋಧ ಪಕ್ಷದವರು ಕೇಳುತ್ತಾರೆ ಎಂದು ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ ಎಂದು ಪ್ರಶ್ನೆ ಮಾಡಿದರು. ಇದು ಸಿಬಿಐಗೆ ಕೊಡುವ ಪ್ರಕರಣವಲ್ಲ. ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂದರು.
ಸದನದಲ್ಲಿ ಯಾವ ವಿಷಯ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್‌ಗೆ ಯಾವ ವಿಚಾರದ ಬಗ್ಗೆ ಪತ್ರ ಕೊಡ್ತಾರೋ ನೋಡೋಣ. ಬಿಜೆಪಿಯವರಿಗೆ ನಾವು ಉತ್ತರ ಕೊಡುತ್ತೇವೆ. ಯಾವುದೇ ಕಾರಣಕ್ಕೆ ಉತ್ತರ ಕೊಡಲು ಹಿಂಜರಿಯುವುದಿಲ್ಲ ಎಂದರು.





