ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ.
ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅವರ ಸೋದರ ಮಾವ ಮತ್ತು ಮತ್ತೋರ್ವ ವ್ಯಕ್ತಿಯ ವಿರುದ್ಧ ದಾಖಲಾದ ಪ್ರಕರಣವನ್ನು ವೈಯಕ್ತಿಕವಾಗಿ ವಾದಿಸಲು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ತನಿಖೆಯ ಬಗ್ಗೆ ಅಗತ್ಯ ದಾಖಲೆಗಳನ್ನು ಮತ್ತು ಅಂತಿಮ ವರದಿಯನ್ನು ಮಾರ್ಚ್.1, 2025ರೊಳಗೆ ಕೃಷ್ಣ ಅವರಿಗೆ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಖುದ್ದು ತಾವೇ ವಾದ ಮಂಡಿಸಲಿದ್ದು, ಈ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ನೇಹಮಯಿ ಕೃಷ್ಣ ವಾದ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ತಲೆನೋವಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.





