ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಫೇಸ್‌ಬುಕ್‌ನಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ 15ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪ್ರಕರಣದ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದು ಕೃತ್ಯ ಎಸಗಿದ್ದಾರೆ. ಠಾಣೆ ಮೇಲೆ ಕಲ್ಲು ಎಸೆದವರನ್ನು ಸುಮ್ಮನೇ ಬಿಡುವ ಮಾತೇ ಇಲ್ಲ. ಆರೋಪಿಗಳ ಬಂಧನಕ್ಕೆ ಸೂಚನೆ ನೀಡಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರಲ್ಲಿ ಯಾರೇ ತಪ್ಪು ಮಾಡಿದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇನ್ನು ಶಾಸಕ ಸಂಗಮೇಶ್ ಪುತ್ರನಿಂದ ಮಹಿಳಾ ಅಧಿಕಾರಿ ಮೇಲೆ ಬೆದರಿಕೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಸವೇಶ್ ಪಾತ್ರವಿದ್ದರೆ ಪೊಲೀಸರು ಎಫ್‌ಐಆರ್ ದಾಖಲಿಸಲಿದ್ದಾರೆ. ತುರ್ತು ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಿದ್ದೇನೆ ಎಂದರು.





